Vice President Election 2022: ಇಂದು ಉಪರಾಷ್ಟ್ರಪತಿ ಚುನಾವಣೆ; ಜಗದೀಪ್ ಧನಕರ್- ಮಾರ್ಗರೆಟ್ ಆಳ್ವ ಮಧ್ಯೆ ಸ್ಪರ್ಧೆ
Vice President Poll Today: ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಸಂಜೆಯ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.
ಜಗದೀಪ್ ಧನಕರ್- ಮಾರ್ಗರೆಟ್ ಆಳ್ವ |
ನವದೆಹಲಿ: ಭಾರತದ ಉಪ ರಾಷ್ಟ್ರಪತಿ (Vice President Election) ಹುದ್ದೆಗೆ ಇಂದು ಬೆಳಗ್ಗೆ 10 ಗಂಟೆಯಿಂದ ಮತದಾನ ನಡೆಯಲಿದ್ದು, ಸಂಸತ್ತಿನ ಉಭಯ ಸದನಗಳ ಸದಸ್ಯರು ನೂತನ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಮತ ಚಲಾಯಿಸಲಿದ್ದಾರೆ. ಎನ್‌ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ (Jagdeep Dhankar) ಕಣಕ್ಕಿಳಿದಿದ್ದು, ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಮಾರ್ಗರೇಟ್ ಆಳ್ವ (Margaret Alva) ಅವರನ್ನು ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿವೆ. ಹಾಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು (Venkaiah Naidu) ಅವರ ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಇಂದು ಚುನಾವಣೆ ನಡೆಯುತ್ತಿದೆ.
ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಸಂಜೆಯ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.
ವೃತ್ತಿಯಲ್ಲಿ ವಕೀಲರಾಗಿರುವ ಜಗದೀಪ್ ಧನಕರ್ 1989ರಲ್ಲಿ ರಾಜಕೀಯ ಪ್ರವೇಶಿಸಿದರು. ಅವರು 2019ರ ಜುಲೈನಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾದರು. ಉಪ ರಾಷ್ಟ್ರಪತಿ ಸ್ಥಾನಕ್ಕೆ ನಾಮನಿರ್ದೇಶನಗೊಂಡ ನಂತರ ಅವರು ಪಶ್ಚಿಮ ಬಂಗಾಳದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದರು.
ಮಾರ್ಗರೆಟ್ ಆಳ್ವಾ ಜುಲೈ 19ರಂದು ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಜುಲೈ 17ರಂದು ವಿರೋಧ ಪಕ್ಷಗಳು ರಾಜಸ್ಥಾನದ ಮಾಜಿ ರಾಜ್ಯಪಾಲರನ್ನು ಉಪರಾಷ್ಟ್ರಪತಿ ಚುನಾವಣೆಗೆ ತಮ್ಮ ಜಂಟಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದವು. ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ನಡೆದ 17 ಪಕ್ಷಗಳ ವಿರೋಧ ಪಕ್ಷದ ನಾಯಕರ ಸಭೆಯಲ್ಲಿ ಮಾರ್ಗರೆಟ್ ಆಳ್ವಾ ಅವರನ್ನು ಕಣಕ್ಕಿಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಇಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಮತದಾನದಿಂದ ದೂರ ಉಳಿಯುವುದಾಗಿ ಹೇಳಿದೆ. ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್), ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮಾರ್ಗರೇಟ್ ಆಳ್ವಾ ಅವರನ್ನು ಬೆಂಬಲಿಸಲಿವೆ. ಮತ್ತೊಂದೆಡೆ, ಜಗದೀಪ್ ಧನಕರ್ ಅವರಿಗೆ ಜೆಡಿಯು, ವೈಎಸ್‌ಆರ್‌ಸಿಪಿ, ಬಿಎಸ್‌ಪಿ, ಎಐಎಡಿಎಂಕೆ, ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಶಿವಸೇನೆಯಂತಹ ಪಕ್ಷಗಳ ಬೆಂಬಲವಿದೆ.
ಎನ್‌ಡಿಎ ಪರವಾಗಿ ಕಣಕ್ಕಿಳಿದಿರುವ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನಕರ್ ಅವರಿಗೆ ಸುಲಭ ಗೆಲುವು ಖಚಿತ ಎನ್ನಲಾಗಿದೆ. 80 ವರ್ಷದ ಮಾರ್ಗರೆಟ್ ಆಳ್ವಾ ಹಿರಿಯ ಕಾಂಗ್ರೆಸ್ ನಾಯಕಿಯಾಗಿದ್ದು, ರಾಜಸ್ಥಾನ ಮತ್ತು ಉತ್ತರಾಖಂಡದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. 71 ವರ್ಷದ ಜಗದೀಪ್ ಧನಕರ್ ಅವರು ಸಮಾಜವಾದಿ ಹಿನ್ನೆಲೆ ಹೊಂದಿರುವ ರಾಜಸ್ಥಾನದ ಜಾಟ್ ಸಮುದಾಯದ ನಾಯಕರಾಗಿದ್ದಾರೆ.
0 Comments